ಮಡಿಕೇರಿ: ಕೊಡಗನ್ನು ಸ್ವಿಟ್ಜರ್ಲೆಂಡ್ನಂತೆ, ಮೈಸೂರನ್ನು ಪ್ಯಾರಿಸ್ನಂತೆ ಮಾಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಆದರೆ ಎರಡೂ ಕಡೆ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಮಂಗಳವಾರ ಆರೋಪಿಸಿದ್ದಾರೆ.
ಇಂದು ಜಿಲ್ಲೆಯ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ನಂತರ ಕೊಡಗಿನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ, ಈ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯಭೇರಿ ಬಾರಿಸಲಿದ್ದು, ಕೇಂದ್ರದಿಂದ ಕ್ಷೇತ್ರಕ್ಕೆ ಅಭಿವೃದ್ಧಿ ಯೋಜನೆಗಳನ್ನು ತರಲಾಗುವುದು ಎಂದು ಭರವಸೆ ನೀಡಿದರು.
ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮಣ್, ಕ್ಷೇತ್ರದ ಅಭ್ಯರ್ಥಿಯಾಗಿರುವ ತಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದು, ಜವಾಬ್ದಾರಿಯಿಂದ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ನನ್ನ ಗೆಲುವಿಗೆ ಕಾರ್ಯಕರ್ತರು ಮತ್ತು ಮುಖಂಡರು ಬೆಂಬಲ ನೀಡುತ್ತಾರೆ. ಸಿಎಂ ಹಾಗೂ ಡಿಸಿಎಂ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಾರೆ. ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕ್ಷೇತ್ರ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.