ಹಾಸನ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ತಮ್ಮ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಾರೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಮಂಡ್ಯ ಕ್ಷೇತ್ರದ ಬಗ್ಗೆ ಪಕ್ಷ ಗಂಭೀರವಾಗಿದ್ದು, ಜೆಡಿಎಸ್ ಕಾರ್ಯಕರ್ತರು ಚೆನ್ನೈನಲ್ಲಿ ಎಚ್.ಡಿ.ಕುಮಾರಸ್ವಾಮಿ ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ, ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಮಂಡ್ಯದಿಂದ ಸ್ಪರ್ಧಿಸುವಂತೆ ಒತ್ತಡ ಹೇರಿದ್ದಾರೆ ಎಂದರು.
ಇತ್ತೀಚೆಗೆ ಸಭೆ ಸೇರಿದ್ದ ಕೋರ್ ಕಮಿಟಿ ಕೂಡ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಂಡಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.
ನಂತರ ಕೋಲಾರದಲ್ಲಿ ಎಸ್ಸಿ-ಎಸ್ಟಿ ಕಾರ್ಮಿಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು, ಜೆಡಿಎಸ್ ಮತ್ತು ಬಿಜೆಪಿ ನಾಯಕರು ಎಲ್ಲಾ ಕ್ಷೇತ್ರಗಳಲ್ಲಿ ಒಟ್ಟಾಗಿ ಪ್ರಚಾರ ಮಾಡಲಿದ್ದು, ರಾಷ್ಟ್ರದ ಹಿತದೃಷ್ಟಿಯಿಂದ ಭಿನ್ನಾಭಿಪ್ರಾಯ ಬದಿಗೊತ್ತಲಿದ್ದಾರೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಆರೋಪಿಸಿದ ಮಾಜಿ ಪ್ರಧಾನಿ, ರಾಜ್ಯದಲ್ಲಿ ಎಸ್ಸಿ ಮತ್ತು ದೀನದಲಿತರ ಹಿತವನ್ನು ಕಾಂಗ್ರೆಸ್ ಎಂದಿಗೂ ರಕ್ಷಿಸುವುದಿಲ್ಲ ಎಂದರು.
ದಲಿತ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗುತ್ತಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ವ್ಯಂಗ್ಯವಾಡಿದ ದೇವೇಗೌಡರು, ಎಂಪಿ ಚುನಾವಣೆಗೆ ಖರ್ಗೆ ಏಕೆ ಸ್ಪರ್ಧಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಹೈಕಮಾಂಡ್ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್ ನೀಡಿದೆ. ಇದು ಕಾಂಗ್ರೆಸ್ ಬಲವನ್ನು ತೋರಿಸುತ್ತದೆ ಎಂದರು.
ಮೋದಿ ಅವರು ಮೂರನೇ ಬಾರಿಗೆ ರಾಷ್ಟ್ರವನ್ನು ಆಳಬೇಕು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಆರ್ಥಿಕ ನೀತಿಗಳನ್ನು ರೂಪಿಸಬೇಕು. ಹೀಗಾಗಿ ನಾನು ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು